ಬೆಂಗಳೂರು : ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ. ಇದರಿಂದ ಒತ್ತಡದ ಕೆಲಸ ಹಾಗೂ ವೈಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ನಿರ್ಧಾರಕ್ಕೆ ಚಾಲನೆ ಸಿಕ್ಕಿದೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI), ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು , ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಕಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.
ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ರಜೆ ನೀಡುವ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದರು.
ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್‌ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದರು. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ದೇಶಿಸಿದ್ದರು.



