ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕೃಷ್ಣ ಮತ್ತು ಭೀಮಾ ನದಿಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಲಾಗಿದೆ.
ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಭೀರ ಸ್ಥಿತಿ ಉಂಟಾಗಿದ್ದು, 36 ಗ್ರಾಮಗಳು ಪ್ರವಾಹಗ್ರಸ್ತವಾಗಿವೆ. ಅಷ್ಟೇ ಅಲ್ಲದೆ ಜೆಪಿ ಜಿಲ್ಲಾ ಕಚೇರಿ ಇರುವ ಸೆಂಚುರಿಯನ್ ಪಾರ್ಕ್ ಹಾಗೂ ಸುತ್ತಮುತ್ತಲಿನ ಬಡಾವಣೆಗಳು ಜಲಾವೃತಗೊಂಡಿವೆ. ಹತ್ತಿಕುಣಿ ಜಲಾಶಯದ ನೀರು ಕೂಡ ಭೀಮಾ ನದಿಗೆ ಸೇರುವುದರಿಂದ ಕೃಷಿ ಜಮೀನುಗಳು ಹಾಗೂ ಜನವಸತಿ ಪ್ರದೇಶಗಳೂ ಜಲಾವೃತಗೊಂಡಿವೆ. ಇದೀಗ ಸಿಎಂ ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದ್ದಾರೆ.