Wednesday, July 15, 2026
Google search engine

Homeರಾಜ್ಯಕರ್ನಾಟಕದಲ್ಲಿ ಮತ್ತೆ ಕೋವಿಡ್ ಆತಂಕ : ಆಂಧ್ರ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಕೋವಿಡ್ ಆತಂಕ : ಆಂಧ್ರ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಸೋಂಕಿನ ಆತಂಕ ಹೆಚ್ಚಾಗಿದ್ದು, ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಎಚ್ಚರಿಕೆ ಹೆಚ್ಚಾಗಿದೆ.

ಜೂನ್ ತಿಂಗಳಲ್ಲಿ ಕೇವಲ 14 ಕೋವಿಡ್ ಪ್ರಕರಣಗಳು ದಾಖಲಾಗಿದ್ದರೆ, ಜುಲೈ ತಿಂಗಳ ಮೊದಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 32 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ಕೋವಿಡ್ ವಾರ್ಡ್‌ಗಳನ್ನು ಅಗತ್ಯ ಸಿದ್ಧತೆಯೊಂದಿಗೆ ಇರಿಸುವಂತೆ ಸೂಚನೆ ನೀಡಲಾಗಿದೆ.

ಆಂಧ್ರಪ್ರದೇಶದ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗಿದ್ದು, ತುಮಕೂರಿನ ಪಾವಗಡದಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಸರ್ಕಾರ ಸೂಚಿಸಿದೆ.

ಆಂಧ್ರಪ್ರದೇಶದಲ್ಲಿ ಇಬ್ಬರ ಸಾವು : ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಇತ್ತೀಚೆಗೆ 8 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಂಪೇಟೆಯ 52 ವರ್ಷದ ವ್ಯಕ್ತಿಯೊಬ್ಬರು ಜ್ವರ ಮತ್ತು ಕೆಮ್ಮಿನ ಬಳಿಕ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕಡಪದ 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಸೋಂಕು ದೃಢಪಟ್ಟ ಬಳಿಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಅಲ್ಲದೆ, ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ವೈದ್ಯಕೀಯ ಸಲಹೆ ಪಡೆಯುವಂತೆ ಮನವಿ ಮಾಡಿದೆ.


RELATED ARTICLES
- Advertisment -
Google search engine

Most Popular