ಮೈಸೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ 22 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಸಚಿವ ಡಾ. ಮಹದೇವಪ್ಪ ಅವರಿಗೆ ಬೆಂಗಳೂರಿನ ಅವರ ನಿವಾಸದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ನೇತೃತ್ವದಲ್ಲಿ ಆಹ್ವಾನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ‘ಯುವ ಸಂಭ್ರಮ’ದ ಪೋಸ್ಟರ್ ಅನ್ನು ಅವರು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ಗೃಹ ಕಚೇರಿಯಲ್ಲಿ ಫಲಪುಷ್ಪ, ರೇಷ್ಮೆ ಶಾಲು, ಹಾರ ನೀಡಿ ಆಹ್ವಾನ ಪತ್ರಿಕೆಯನ್ನು ನೀಡಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಯಿತು.
ಈ ಕಾರ್ಯಕ್ರಮಗಳಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಹಾಗೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಉಪಸ್ಥಿತರಿದ್ದರು.