Wednesday, July 15, 2026
Google search engine

Homeರಾಜಕೀಯಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ? ಜುಲೈ 19ರಂದು ದೆಹಲಿಯಲ್ಲಿ ಮಹತ್ವದ ಸಭೆ ಸಾಧ್ಯತೆ

ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ? ಜುಲೈ 19ರಂದು ದೆಹಲಿಯಲ್ಲಿ ಮಹತ್ವದ ಸಭೆ ಸಾಧ್ಯತೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗೆ ಚಟುವಟಿಕೆಗಳು ವೇಗ ಪಡೆದಿವೆ. ಜುಲೈ 19ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಹತ್ವದ ಸಭೆ ನಡೆಸುವ ಸಾಧ್ಯತೆ ಇದ್ದು, ಈ ಸಭೆಯಲ್ಲೇ ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾರಾಂತ್ಯದಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸರಣಿ ಸಭೆ ನಡೆಸಲಿದ್ದಾರೆ ಎನ್ನಲಾಗಿದ್ದು, ಸಭೆಯ ಬಳಿಕ ಜುಲೈ 20 ಅಥವಾ 21ರಂದು ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.

ಸಂಪುಟ ವಿಸ್ತರಣೆಯಲ್ಲಿ ಎಲ್ಲ ಖಾಲಿ ಸ್ಥಾನಗಳನ್ನು ಭರ್ತಿ ಮಾಡದೆ, ಕೆಲವು ಸ್ಥಾನಗಳನ್ನು ಮುಂದಿನ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಖಾಲಿ ಉಳಿಸಬಹುದೆಂಬ ಚರ್ಚೆಯೂ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಜೊತೆಗೆ, ಅನುಭವಿಗಳು ಮತ್ತು ಹೊಸ ಮುಖಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳೂ ಹರಿದಾಡುತ್ತಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹಿರಿಯ ಹಾಗೂ ಯುವ ಶಾಸಕರ ಹೆಸರುಗಳು ಕೇಳಿಬರುತ್ತಿದ್ದು, ಅಂತಿಮ ಪಟ್ಟಿಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ. ಈಗಾಗಲೇ ಹಲವು ಆಕಾಂಕ್ಷಿಗಳು ದೆಹಲಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಜುಲೈ 19ರ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯ ಚಿತ್ರಣ ಸ್ಪಷ್ಟವಾಗುವ ನಿರೀಕ್ಷೆಯಿದ್ದು, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಬೇಕಿದೆ.


RELATED ARTICLES
- Advertisment -
Google search engine

Most Popular