ಬೆಂಗಳೂರು : ರಾಜ್ಯದ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯೊಂದಕ್ಕೆ ಸರ್ಕಾರ ಮುನ್ನುಡಿ ಬರೆದಿದ್ದು, ಕರ್ನಾಟಕದ ಎಲ್ಲಾ 5,927 ಗ್ರಾಮ ಪಂಚಾಯಿತಿಗಳಿಗೆ ಮುಂಬರುವ ಆಗಸ್ಟ್ 15 ರೊಳಗೆ ‘ಮಹಾತ್ಮ ಗಾಂಧೀಜಿ’ ಅವರ ಹೆಸರನ್ನು ನಾಮಕರಣ ಮಾಡುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇನ್ನೂ ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು ಹಾಗೂ ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಗ್ರಾಮಸ್ವರಾಜ್ಯದ ಕನಸು ಕಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರನ್ನು ಗ್ರಾಮೀಣ ಮಟ್ಟದಲ್ಲಿ ಚಿರಸ್ಥಾಯಿಗೊಳಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ಹಿನ್ನೆಲೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು ಮರುನಾಮಕರಣ ಮಾಡುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿತ್ತು.
ಅದರಂತೆ ಇದೀಗ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 15ರ ಒಳಗಾಗಿ ರಾಜ್ಯದ ಪ್ರತಿಯೊಂದು ಗ್ರಾ.ಪಂ ಗೂ ಮಹಾತ್ಮ ಗಾಂಧೀಜಿಯವರ ಹೆಸರು ಇಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಧಾರವೊಂದರ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಚಿವರು, ಗ್ರಾಮೀಣ ಭಾಗದ ಜನರಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಬದಲಿಗೆ ಕೇಂದ್ರ ಸರ್ಕಾರವು ಹೊಸದಾಗಿ ‘ವಿಬಿ ಜಿ ರಾಮ್ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೈಬಿಡಲಾಗಿದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರವು ತನ್ನ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿಯವರ ಹೆಸರನ್ನು ನಾಮಕರಣ ಮಾಡಲು ದೃಢ ನಿರ್ಧಾರ ಕೈಗೊಂಡಿದೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.



