ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.



