ಬಳ್ಳಾರಿ: ಮಾದಕ ದ್ರವ್ಯ ನಿಯಂತ್ರಣ ಉದ್ದೇಶದಿಂದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.30ರವರೆಗೆ ಜಿಲ್ಲೆಯಲ್ಲಿ ‘ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಹೇಳಿದರು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಸಂಯುಕ್ರಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಅಭಿಯಾನದ ಅಂಗವಾಗಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ತಡೆಯಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯಗಳು ಈ ಅಭಿಯಾನ ನಡೆಸಲಿವೆ ಎಂದರು.
ಅಭಿಯಾನದ ಸಂದರ್ಭದಲ್ಲಿ ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ, ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಮತ್ತು ಅವುಗಳ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ತಿಳಿಸಲು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ದೇಶಪಾಂಡೆ, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್, ಬೆಂಗಳೂರಿನ ಕೆಫಕ್ ಸಂಸ್ಥೆಯ ಚಂದ್ರ ಶೇಖರ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕರಾದ ವಿಜಯ್ ಕುಮಾರ್, ರಘುವರ್ಮ ಸೇರಿದಂತೆ ಎಲ್ಲಾ ತಾಲ್ಲೂಕಿನ ಎನ್‌ಆರ್‌ಎಲ್‌ಎಂ ಯೋಜನೆಯ ಸಿಬ್ಬಂದಿಗಳು, ಸ್ವ ಸಹಾಯ ಗುಂಪಿನ ಮಹಿಳೆಯರು, ರೈತರು ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.