ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಶುಕ್ರವಾರ ಮೇಟಗಳ್ಳಿ ಪ್ರದೇಶದ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 30ಕ್ಕೂ ಹೆಚ್ಚು ಅನಧಿಕೃತ ಪೆಟ್ಟಿಗೆ ಅಂಗಡಿಗಳು ಹಾಗೂ ಇತರೆ ನಿರ್ಮಾಣಗಳನ್ನು ತೆರವುಗೊಳಿಸಲಾಯಿತು.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-5ರ ವ್ಯಾಪ್ತಿಯಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಫುಟ್‌ಪಾತ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳು, ತಳ್ಳುವ ಗಾಡಿಗಳು, ಜಾಹೀರಾತು ಫಲಕಗಳು ಹಾಗೂ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳಿಗೆ ಈ ಕಾರ್ಯಾಚರಣೆ ಅಚ್ಚರಿ ಉಂಟುಮಾಡಿತು.
ನೂತನ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಅವರ ಮಾರ್ಗದರ್ಶನದಲ್ಲಿ, ವಲಯ ಕಚೇರಿ-5ರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಯತೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ವರ್ಕ್ ಇನ್ಸ್‌ಪೆಕ್ಟರ್ ನಾಗರಾಜು, ಹೆಲ್ತ್ ಇನ್ಸ್‌ಪೆಕ್ಟರ್ ಗೀತಾ, ಮೇಟಗಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅರುಣ್ ಸೇರಿದಂತೆ ಪಾಲಿಕೆ ಮತ್ತು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ನಗರದ ವಿವಿಧ ಭಾಗಗಳಲ್ಲೂ ಇದೇ ರೀತಿಯ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.



