ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ (67) ಅವರು ಸೋಮವಾರ ರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ದೇವರಾಜ್ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಸಿಎಂ ಡಿಕೆಶಿ ಸಂತಾಪ: ‘ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆಯ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ’ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ.



