ಬೆಂಗಳೂರು : ಕನ್ನಡ ಚಿತ್ರರಂಗದ ಉಳಿವು ಹಾಗೂ ಅಭಿವೃದ್ಧಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಜಾರಿಗೆ ಸೇರಿದಂತೆ ಹಲವು ಬೇಡಿಕೆಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲ ಅವರ ನೇತೃತ್ವದ ನಿಯೋಗವು ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿವಿಧ ಮನವಿಗಳನ್ನು ಸಲ್ಲಿಸಿತು. ಚಿತ್ರರಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಸಿನಿಮಾ ಆರ್ಕೈವ್ ಸ್ಥಾಪನೆ, ಸಹಾಯಧನ ಹೆಚ್ಚಳ, ಸರ್ಕಾರದ ವತಿಯಿಂದ ಪ್ರತ್ಯೇಕ ಓಟಿಟಿ ವೇದಿಕೆ ಆರಂಭ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ಹಾಗೂ ಏಕಪರದೆ ಚಿತ್ರಮಂದಿರಗಳ ನವೀಕರಣಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿ ಚಿತ್ರರಂಗದ ಉಳಿವಿಗಾಗಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಅಲ್ಲದೆ ಹೊಸ ಚಲನಚಿತ್ರ ನೀತಿ ಕುರಿತು ವಿಸ್ತೃತ ಚರ್ಚೆ ನಡೆಸುವುದಾಗಿ ತಿಳಿಸಿದ ಅವರು, ಬಾಕಿ ಇರುವ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ‘ಚಿತ್ರನಗರಿ’ ಯೋಜನೆಗೆ ಈಗಾಗಲೇ ಘೋಷಿತ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ನಿರ್ದೇಶನ ನೀಡಲಾಗಿದ್ದು, ಬಿಡಿಎ ಮೂಲಕ 5 ಎಕರೆ ಭೂಮಿ ನೀಡುವ ಬೇಡಿಕೆ ಸೇರಿದಂತೆ ಇತರ ಸೌಲಭ್ಯಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಮನವಿ ಪತ್ರದಲ್ಲಿ 2011ರ ಚಲನಚಿತ್ರ ನೀತಿಯನ್ನು ಇಂದಿಗೂ ಅನುಸರಿಸಲಾಗುತ್ತಿದ್ದು, ಡಿಜಿಟಲ್ ಯುಗಕ್ಕೆ ಅನುಗುಣವಾಗಿ ಹೊಸ ನೀತಿ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಓಟಿಟಿ ಹಾಗೂ ಡಿಜಿಟಲ್ ವಿತರಣಾ ವ್ಯವಸ್ಥೆ, ಎಐ ಬಳಕೆ, ಸಣ್ಣ ಚಿತ್ರಗಳಿಗೆ ಪ್ರೋತ್ಸಾಹ, ಚಿತ್ರಮಂದಿರಗಳ ಉಳಿವು ಹಾಗೂ ಕಲಾವಿದರ ಕಲ್ಯಾಣಕ್ಕೆ ಹೊಸ ರೂಪುರೇಷೆ ಅಗತ್ಯವಿದೆ ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಚಿತ್ರಮಂದಿರಗಳ ಸಂಖ್ಯೆ 1200ರಿಂದ 400ಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ ಹೊಸ ಬಡಾವಣೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿತ್ರಮಂದಿರ ನಿರ್ಮಾಣಕ್ಕೆ ವಿಶೇಷ ಪ್ರೋತ್ಸಾಹ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಹಳೆಯ ಏಕಪರದೆ ಚಿತ್ರಮಂದಿರಗಳ ನವೀಕರಣಕ್ಕೆ ಶೇ.4 ಬಡ್ಡಿದರದಲ್ಲಿ ಸಾಲ ಸೌಲಭ್ಯ, ಸಿನಿಮಾ ಆರ್ಕೈವ್ ಕಾರ್ಯಕ್ಕೆ ಅನುದಾನ ಬಿಡುಗಡೆ, 2022ರಿಂದ ಬಾಕಿ ಇರುವ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಶೀಘ್ರ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನಿಯೋಗ ಮುಂದಿಟ್ಟಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಘೋಷಿತ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಜೊತೆಗೆ ಚಲನಚಿತ್ರಗಳಿಗೆ ನೀಡುವ 10 ಲಕ್ಷ ರೂ. ಸಹಾಯಧನವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.



