ಬೆಂಗಳೂರು : ಕಳೆದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡದೇ ಕಾನೂನು ಪರಿಶೀಲನೆಗಾಗಿ ಪೆಂಡಿಂಗ್ ಇಟ್ಟುಕೊಂಡಿದ್ದು, ಈ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಸರ್ಕಾರ ಮಂಡಿಸಿದ್ದ ಒಟ್ಟು 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದು, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ ಪರಿಶಿಷ್ಟ ವರ್ಗಗಳ ವಿಧೇಯಕಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆ ಕೇಳಿ 2 ವಿಧೇಯಕಗಳನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ಅಂಗೀಕರಿಸಿತ್ತು. ಈ ವಿಧೇಯಕವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳನ್ನು ಪ್ರಚೋದಿಸುವ, ಪ್ರಸಾರ ಮಾಡುವ ಅಥವಾ ಪ್ರೋತ್ಸಾಹಿಸುವ ಕ್ರಿಯೆಗಳನ್ನು ತಡೆಯುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿತ್ತು. ಈ ವಿಧೇಯಕಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ವಿಪಕ್ಷಗಳ ವಿರೋಧದ ನಡುವೆ ಸರ್ಕಾರ ದ್ವೇಷ ಭಾಷಣ ಬಿಲ್ ಅಂಗೀಕರಿಸಿತ್ತು.
ಇನ್ನೂ ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ಗದ್ದಲಕ್ಕೆ ಕಾರಣವಾಗಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಲು ಹಿಂದೇಟು ಹಾಕಿದ್ದು, ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯಪಾಲರು ಮುಂದಾಗಿದ್ದಾರೆ.
ಅಧಿವೇಶನದಲ್ಲಿ ಮಂಡಿಸಿದ್ದ 22 ಮಸೂದೆಗಳನ್ನು ರಾಜ್ಯ ಸರ್ಕಾರ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಟ್ಟಿತ್ತು. ಈ ಪೈಕಿ 19 ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಆದರೆ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮಸೂದೆ ಹಾಗೂ ಪರಿಶಿಷ್ಟ ವರ್ಗಗಳ ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಈ ಎರಡು ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆಯನ್ನು ಕೇಳಿ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.



