ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇಂದು ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅತ್ತ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಇಲ್ಲಿ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ರಾಜ್ಯದ ಇತರ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಆಂಧ್ರ ಕರಾವಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.
ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಲ್ಲಿಯೂ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಭೀಮಾ, ಭೋರಿ ಸೇರಿ ಹಲವು ನದಿಗಳಲ್ಲಿ ಪ್ರವಾಹ ಉಂಟಾಗಿದೆ.
ಇನ್ನು ಭಾರೀ ಮಳೆಯ ಪರಿಣಾಮ ಕಲಬುರಗಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹೊಲ ಗದ್ದೆಗಳಲ್ಲಿ ನೀರು ನಿಂತು ಮುಂಗಾರು ಹಂಗಾಮಿನ ತೊಗರಿ, ಸೂರ್ಯಕಾಂತಿ, ಹತ್ತಿ, ಹೆಸರು, ಉದ್ದು ಬೆಳೆಗಳು ಸಂಪೂರ್ಣ ಹಾಳಾಗಿವೆ. ಅಲ್ಲದೆ ಜಲಾವೃತಗೊಂಡ ಮನೆಗಳ ಜನರನ್ನು ಬೇರೆಡೆ ಸ್ಥಳಾಂತರಿಸಿ, ಆಸರೆ ಕೇಂದ್ರ ತೆರೆಯಲಾಗುತ್ತಿದೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ನಿವಾಸಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.