ಬೆಂಗಳೂರು : ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಸರ್ಕಾರ ತುರ್ತು ನಿರ್ಧಾರ ಕೈಗೊಂಡಿರುವುದನ್ನು ಅವರು ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದೆ. ಹಾಗಿದ್ದರೂ ಸರ್ಕಾರ ಇಷ್ಟು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರಲ್ಲದೆ, ನ್ಯಾಯಾಂಗದ ಪರಿಶೀಲನೆಯಲ್ಲಿರುವ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿರುವುದು ನ್ಯಾಯಾಂಗ ಪ್ರಕ್ರಿಯೆಗೆ ಅವಮಾನ ಮಾಡಿದಂತಾಗಿದೆ ಎಂದು ಆರೋಪಿಸಿದರು.
ಶಾಲೆ ಹಾಗೂ ಕಾಲೇಜುಗಳಲ್ಲಿ ಯೂನಿಫಾರ್ಮ್ ವ್ಯವಸ್ಥೆಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಶಿಸ್ತು ಬೆಳೆಸುವುದಾಗಿದೆ. ಆದರೆ ಧರ್ಮವನ್ನು ಯೂನಿಫಾರ್ಮ್ ನೀತಿಗೆ ತಂದು ಕಾಂಗ್ರೆಸ್ ಸರ್ಕಾರ ಸಮಾನತೆಯ ಬದಲು ಭೇದಭಾವಕ್ಕೆ ಉತ್ತೇಜನ ನೀಡುತ್ತಿದೆ ಎಂದು ಟೀಕಿಸಿದರು.
ಇನ್ನು ಒಂದು ಸಮುದಾಯವನ್ನು ತೃಪ್ತಿಪಡಿಸುವ ರಾಜಕೀಯಕ್ಕಾಗಿ ಸರ್ಕಾರ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುತ್ತಿದೆ. ವಿದ್ಯಾರ್ಥಿಗಳ ನಡುವೆ ವಿಭಜನಾ ರಾಜಕಾರಣ ನಡೆಸುವ ಮೂಲಕ ಶಾಲೆಗಳ ಶಿಸ್ತು ಮತ್ತು ಏಕತೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಒತ್ತಾಯಿಸುತ್ತಿರುವ ಸಂದರ್ಭದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಧಾರ್ಮಿಕ ಆಧಾರದ ಮೇಲೆ ಜನರನ್ನು ವಿಭಜಿಸುವ ನೀತಿಯನ್ನು ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಕೇಸರಿ ಶಾಲು ಧರಿಸುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ನಿರ್ಧಾರಕ್ಕೂ ಅವರು ವಿರೋಧ ವ್ಯಕ್ತಪಡಿಸಿದರು. ಕೇಸರಿ ಶಾಲು ಧಾರ್ಮಿಕ ಸಂಕೇತವಲ್ಲ. ಆದರೆ ವಿದ್ಯಾರ್ಥಿಗಳು ಯಾವ ಬಣ್ಣದ ಬಟ್ಟೆ ಧರಿಸಬೇಕು, ಯಾವುದು ಧರಿಸಬಾರದು ಎಂದು ಸರ್ಕಾರ ನಿರ್ಧರಿಸುವುದು ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.



