ದೆಹಲಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಅಧಿಕಾರ ಹಂಚಿಕೆ ಸಂಧಾನ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಇಂತಹ ಚರ್ಚೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದೀಗ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಅಧಿಕಾರ ಹಂಚಿಕೆ ಬಗ್ಗೆ, ಎರಡೂವರೆ ವರ್ಷದ ಅವಧಿ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್ ಇದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಲಾಗದು ಎಂದಿದ್ದಾರೆ.
ಇನ್ನೂ ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಇದೆ ಎಂಬ ಮಾತುಗಳು ಬರುತ್ತಿವೆ. ಆದರೆ ನಾನು ಯಾರನ್ನೂ ಭೇಟಿಯಾಗುತ್ತಿಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.
ಇತ್ತ ಹೈಕಮಾಂಡ್ ಬಗ್ಗೆಯೂ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿ ಅವರನ್ನು ಪ್ರಧಾನಿಯಾಗಿ ನೋಡಲು ತಮಗೆ ಇಷ್ಟವಿದೆ ಎಂದು ಹೇಳಿದ್ದು, ಆದರೆ ಪ್ರಿಯಾಂಕ ಗಾಂಧಿ ಅವರಿಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು ಎಂಬ ಆಸೆ ಇದೆ ಎಂದು ಹೇಳಿದ್ದಾರೆ. ಪ್ರಿಯಾಂಕಾ ಅವರ ಧ್ಯೇಯವೇ ರಾಹುಲ್ ಅವರನ್ನು ಪ್ರಧಾನಿಯಾಗಿ ಮಾಡುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪ್ರಿಯಾಂಕಾ ಅವರನ್ನು ಪ್ರಧಾನಿಯಾಗಿ ನೋಡಲು ಇಷ್ಟ. ಆದರೆ ಈ ವಿಷಯದ ಬಗ್ಗೆ ನನಗೆ ತಿಳಿದಿಲ್ಲ. ನನ್ನ ನಾಯಕರು ಎಐಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ. ಅವರು ಏನು ನಿರ್ಧಾರ ಮಾಡಿದರೂ ಅದನ್ನು ಸ್ವೀಕರಿಸುತ್ತೇನೆ. ಯಾವ ಹೆಸರುಗಳನ್ನೂ ಊಹಿಸಬಾರದು. ಯಾವುದೇ ದಿನ ಕಾಂಗ್ರೆಸ್ ಪಕ್ಷ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಇನ್ನೂ ಮುಂದುವರೆದು ಉಪಮುಖ್ಯಮಂತ್ರಿಯಾಗಿ ಪೂರ್ಣ ಐದು ವರ್ಷ ಮುಂದುವರೆಯಲು ಸಂತೋಷವೇ ಎಂದು ಕೇಳಿದಾಗ, “ನಾನು ಯಾವಾಗಲೂ ಪಕ್ಷದ ಕಾರ್ಯಕರ್ತನಾಗಿರಲು ಸಂತೋಷ. 1990ರ ದಶಕದಿಂದಲೂ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರು. ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಮಹತ್ವದ್ದು. ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಪಕ್ಷದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸುವುದರ ಮೂಲಕ ಊಹಾಪೋಹಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸಿದ್ದಾರೆ.
ಪಕ್ಷದ ಹೈಕಮಾಂಡ್ ನಿರ್ಧಾರಗಳನ್ನು ಗೌರವಿಸುವುದಾಗಿ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಪಕ್ಷದಲ್ಲಿ ಶಾಂತಿ ಕಾಪಾಡಲು ಮಾಡಿದ ಪ್ರಯತ್ನ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ಅನಗತ್ಯ ಎಂದು ಅವರು ಭಾವಿಸುತ್ತಾರೆ. ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯುವುದೇ ತಮ್ಮ ಗುರಿ ಎಂದು ಶಿವಕುಮಾರ್ ಹೇಳಿದ್ದಾರೆ. 1990ರ ದಶಕದಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆ ಶುರುವಾಗಿದೆ.



