Monday, February 16, 2026
Google search engine

Homeರಾಜ್ಯಕೋಲಾರದಲ್ಲಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ

ಕೋಲಾರದಲ್ಲಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ

ಕೋಲಾರ : ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಸಂಜೆ 4.20ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ.  ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್​ಗಳನ್ನು ಇಲ್ಲಿ ತಯಾರಿಸಲಿದ್ದು,  ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.

ವೇಮಗಲ್ ಕೈಗಾರಿಕಾ ಪ್ರದೇಶವು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಮೀಪವಿರುವುದು ಈ ಸ್ಥಳ ಆಯ್ಕೆಗೂ ಪ್ರಮುಖ ಕಾರಣವಾಗಿದೆ. ಈ ಘಟಕ ಆರಂಭದಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಳವಾಗಲಿದ್ದು, ಕೋಲಾರ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ಸಿಗಲಿದೆ. ರಾಷ್ಟ್ರಮಟ್ಟದಲ್ಲಿ ಕೋಲಾರ ಜಿಲ್ಲೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸುವ ಯೋಜನೆ ಇದಾಗಿದೆ.

RELATED ARTICLES
- Advertisment -
Google search engine

Most Popular