ಶಿವಮೊಗ್ಗ : ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(ತಂದೆ) ಅವರೂ ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಾ ಅಕ್ಕ ಸಾಗುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಭರವಸೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಗಾಜನೂರು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ೧೫ ವರ್ಷಗಳಿಂದ ಬಿಜೆಪಿ ಸುಳ್ಳಿನ ರಾಜಕಾರಣ ಮಾಡಿಕೊಂಡು ಬರುತ್ತಿದೆ. ಇದರಿಂದ, ಬಂಗಾರಪ್ಪ ಅವರ ಮಾದರಿ ಕೆಲಸಗಳಿಗೆ ಮಸಿ ಬಳಿಯುತ್ತಿದ್ದಾರೆ ಎಂದು ಆರೋಪಿಸಿದರು.
ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ನುಡಿದಂತೆ ನಡೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಅಲ್ಲದೆ, ಹಿಂದೆ ಅವರ ಆಡಳಿತದಲ್ಲಿ ಸುಮಾರು ೭೨,೦೦೦ ಕೋಟಿ ಕೃಷಿ ಸಾಲವನ್ನು ಮನ್ನಾ ಮಾಡಿದ್ದರು ಎಂದರು. ಮನಮೋಹನ್ ಸಿಂಗ್ ಅವರ ಮುಂದುವರೆದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕೆ ಶ್ರಮಿಸುತ್ತಿದೆ. ಅದೇ ರೀತಿ ಹಿರಿಯರ ಮಾರ್ಗದರ್ಶನದಲ್ಲಿ ನಾನು ಜನರಿಗೆ ನೆರವಾಗುತ್ತೇನೆ ಎಂದು ಭರವಸೆ ನೀಡಿದರು.
ಗಾಜನೂರು ಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಬಿಜೆಪಿ ನಾಯಕರು ಇಲ್ಲಿ ರಸ್ತೆಗೆ ಜೆಲ್ಲಿ ಕಲ್ಲು ಕೂಡ ಹಾಕಿಲ್ಲ. ಅದೇ ರೀತಿ, ಇಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಜೀವ ತಂಬಬೇಕೆಂದರೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು. ಕಾರ್ಯಕ್ರಮಕ್ಕೂ ಮುನ್ನ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತೀರ್ಥಹಳ್ಳಿ ರಸ್ತೆಯ ಕಾನಿಹಳ್ಳಿ ಗ್ರಾಮದ ಚೌಡಮ್ಮ ದೇವಿಗೆ ಪೂಜೆ ಸಲ್ಲಿಸಿ, ಬೈಕ್ ರ್ಯಾಲಿ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದರು.