ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲಾ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಇದೀಗ ಯೂಟರ್ನ್ ಹೊಡೆದಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮೈತ್ರಿ ಮುಂದುವರಿಸುವುದು ಕಷ್ಟ ಎಂದು ಹೇಳಿದ್ದಾರೆ.
ಈ ಕುರಿತು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಮೈತ್ರಿ ಕಷ್ಟಕರವಾಗಿರುತ್ತದೆ ಎಂದು ತಿಳಿಸಿದರು.
ಅಲ್ಲದೆ ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರಲ್ಲದೆ, ಕೆಲವು ಸ್ಥಳಗಳಲ್ಲಿ ನಾವು ಸ್ವಂತವಾಗಿ ಹೋರಾಡುತ್ತೇವೆ ಎಂದು ಹೇಳಿದರು.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ದೇವೇಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲು ಸಾಧ್ಯವೇ, ಬಿಜೆಪಿ ರಾಜ್ಯ ಅಧ್ಯಕ್ಷರು ಈ ವಿಷಯದ ಬಗ್ಗೆ ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ತಕ್ಷಣ ಚುನಾವಣೆ ನಡೆದರೆ ಬಿಜೆಪಿ ಏಕಾಂಗಿಯಾಗಿ 130-140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಜಯೇಂದ್ರ ಇತ್ತೀಚೆಗೆ ಹೇಳಿದ್ದರೂ ಮೂಲಗಳ ಪ್ರಕಾರ, ಈ ಹೇಳಿಕೆ ಜೆಡಿಎಸ್ ನಾಯಕರಿಗೆ ಅಸಮಾಧಾನ ತಂದಿದೆ ಎನ್ನಲಾಗುತ್ತಿದೆ.



