ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ವಿಚಾರ ಇಂದು ವಿಧಾನಸಭೆಯಲ್ಲಿ ಕೂಡ ಪ್ರತಿಧ್ವನಿಸಿದ ಪ್ರಸಂಗ ನಡೆದಿದೆ.
ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು, ಸಿಎಂಗೆ ರಾಜೀನಾಮೆ ಪತ್ರ ನೀಡಲು ಮುಂದಾಗಿದ್ದರು, ಆಗ ಸಿಎಂ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಮಧ್ಯೆ ಪ್ರವೇಶಿಸಿ ಜಾರ್ಜ್ ಅವರ ಮನವೊಲಿಸಿದರು ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಸ್ವತಃ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಇಂದು ಪ್ರಶ್ನೋತ್ತರ ಅವಧಿಯ ಬಳಿಕ ಈ ವಿಚಾರವಾಗಿ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಪ್ರಸ್ತಾಪ ಮಾಡಿದರು. ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ. ಸಿಎಂ ಮಗನ ಹಸ್ತಕ್ಷೇಪದ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್, ರಾಜೀನಾಮೆ ಕೊಡಲು ಮುಂದಾಗಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವುದು. ಈ ಬಗ್ಗೆ ನಾನು ಮಾಧ್ಯಮಗಳಿಗೆ ಹೇಳಿದ್ದೇನಾ? ನನಗೆ ಸಿಎಂ ಸಿದ್ದರಾಮಯ್ಯ ಮೇಲೆ ಸಂಪೂರ್ಣ ನಂಬಿಕೆ ಇದೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.
ಹಿಂದೆಲ್ಲಾ ದಿನಕ್ಕೆ ಮೂರು ಬಾರಿ ನ್ಯೂಸ್ ಬರುತ್ತಿತ್ತು. ಈಗ ಗಂಟೆಗೊಂದು ಬ್ರೇಕಿಂಗ್ ನ್ಯೂಸ್ ಬರುತ್ತಿದೆ. ಅವರೇ ಸೃಷ್ಟಿ ಮಾಡುತ್ತಿದ್ದಾರೆ. ನಾನು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ನನಗೆ ಸಿಎಂ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ನಂಬಿಕೆ ಮತ್ತು ಬೆಂಬಲ ಇದೆ ಎಂದಿದ್ದಾರೆ.



