ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಮಹಿಳಾ ಘಟಕದಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮನೋವೈದ್ಯೆ ಡಾ.ಕೆ.ಎಸ್.ಪವಿತ್ರಾ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಒತ್ತಡರಹಿತ ಜೀವನ ನಡೆಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.
ಬಳಿಕ ಮಾತನಾಡಿದ ಸೌಮ್ಯಾ ಪ್ರಸಾದ್, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್, ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೇ ಮಹಿಳೆಯರ ಸಮಸ್ಯೆಗಳು, ಹಕ್ಕುಗಳು ಹಾಗೂ ಸಾಧನೆಗಳನ್ನು ಚರ್ಚಿಸುವ ವೇದಿಕೆಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕಿ ಡಾ.ಜಯಲಕ್ಷ್ಮಿ ನಾರಾಯಣ ಹೆಗಡೆ, ಪ್ರತಿವರ್ಷ ವಿಶ್ವವಿದ್ಯಾಲಯದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ದಿನದ ಉದ್ದೇಶ ಮಹಿಳೆಯರ ಹಕ್ಕುಗಳು ಹಾಗೂ ಸಾಧನೆಗಳನ್ನು ಗೌರವಿಸುವುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಹಿಳಾ ಘಟಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ವಿಸ್ತರಣಾ ನಿರ್ದೇಶಕ ಜಿ.ಕೆ.ಗಿರಿಜೇಶ್, ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಸಿ.ಜೆ.ಶ್ರೀಧರ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ನಾರಾಯಣ ಎಂ.ಮಾವರಕರ, ಡಾ.ಎಸ್.ವೈ.ಚಂದ್ರಶೇಖರ್, ಆಹಾರ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಜ್ಯೋತಿ ಎಂ. ರಾಥೋಡ್, ಹಣಕಾಸು ನಿಯಂತ್ರಣಾಧಿಕಾರಿ ಪ್ರಿಯಾಂಕಾ ಉಪಸ್ಥಿತರಿದ್ದರು.



