Friday, April 24, 2026
Google search engine

Homeಸ್ಥಳೀಯಜನಿವಾರ ತೆಗೆಸಿದ ಆರೋಪ : ಮಡಿವಾಳ ಕಾಲೇಜು ಸಿಬ್ಬಂದಿ ಸಸ್ಪೆಂಡ್

ಜನಿವಾರ ತೆಗೆಸಿದ ಆರೋಪ : ಮಡಿವಾಳ ಕಾಲೇಜು ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು : ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಪತ್ರ ಮುಖೇನೆ KEA ಆಗ್ರಹಿಸಿತ್ತು.

2026ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್​​ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿಗಳು ಸೂಚಿಸಿರುತ್ತಾರೆಂದು, ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಬರೆದ ಪತ್ರದಲ್ಲಿ KEA ಆಗ್ರಹಿಸಿತ್ತು.

ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಸಂಬಂಧ ಎಕ್ಸ್ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸರ್ಕಾರದಿಂದ ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಕಾಂಗ್ರೆಸ್‌ ಸರ್ಕಾರ ಈ ವರ್ಷವೂ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುವ ಮೂಲಕ ಮತ್ತೊಮ್ಮೆ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ. ಹಿಂದೆ KPSC ಪರೀಕ್ಷೆ ವೇಳೆ ಮಹಿಳೆಯೊಬ್ಬರ ಮಾಂಗಲ್ಯ ಸರ ತೆಗೆಸಿದ್ದರು ಎಂದು ಕಿಡಿ ಕಾರಿದ್ದರು.

RELATED ARTICLES
- Advertisment -
Google search engine

Most Popular