ಮಂಗಳೂರು ದಕ್ಷಿಣ ಕನ್ನಡ: ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು 3 ದಿನಗಳಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್ ಎಂ ನೌಫಲ್(32) ಬಂಧಿತ ಆರೋಪಿ. ಡ್ರಗ್ಸ್ ಪ್ರಕರಣಕ್ಕೆ ಧರ್ಮಸ್ಥಳ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಅನಾರೋಗ್ಯದ ಕಾರಣ ಈತನನ್ನು ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಆ.16ರಂದು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿಎಸ್ಸೈ ಮನೋಹರ್ ಪುಸಾದ್ ಹಾಗೂ ಸಿಬ್ಬಂದಿ ನೌಫಲ್ ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.