Monday, September 29, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು ಚಿನ್ನ ದರೋಡೆ: ಆರೋಪಿಗಳು ಬಂಧನ

ಮಂಗಳೂರು ಚಿನ್ನ ದರೋಡೆ: ಆರೋಪಿಗಳು ಬಂಧನ

ಮಂಗಳೂರು (ದಕ್ಷಿಣ ಕನ್ನಡ) : ಮಂಗಳೂರು ನಗರದಲ್ಲಿ ನಡೆದ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಕೆ.ಸಿ.ರೋಡ್ ನಿವಾಸಿ ಫಾರಿಶ್ (18), ಉಳ್ಳಾಲ ಮುಕ್ಕಚೇರಿಯ ಸಫ್ವಾನ್ (23), ಮಾಸ್ತಿಕಟ್ಟೆಯ ಅರಾಫತ್ ಅಲಿ(18), ಉಳ್ಳಾಲದ ಫರಾಝ್(19) ಹಾಗೂ ಮತ್ತೊಬ್ಬ ಬಾಲಕ ಎಂದು ಗುರುತಿಸಲಾಗಿದೆ.

ಸೆ.26 ರಂದು ಚಾಯ್ಸ್ ಗೋಲ್ಡ್ ಎಂಬ ಹೆಸರಿನ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಫ ಎಂಬವರು ಸ್ಕೂಟರ್ ನ ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ರಾತ್ರಿ ಸುಮಾರು 8:45 ರ ವೇಳೆಗೆ ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಸ್ಕೂಟರೊಂದರಲ್ಲಿ ಬಂದು ತಡೆದು ನಿಲ್ಲಿಸಿದ್ದಾರೆ.

ಇದೇ ವೇಳೆ ಉಳಿದ ಆರೋಪಿಗಳು ಕಾರೊಂದರಲ್ಲಿ ಬಂದು ಮುಸ್ತಫ ಅವರನ್ನು ಕಾರಿನಲ್ಲಿ ಅಪಹರಿಸಿಕೊಂಡುಹೋಗಿ ಹಲ್ಲೆ ನಡೆಸಿ ಮಂಗಳೂರು ಎಕ್ಕೂರು ಎಂಬಲ್ಲಿ ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 111/2025 ಕಲಂ 137(2), 310(2) BNS -2023 ರಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಸೆ.29 ರಂದು ದಸ್ತಗಿರಿ ಮಾಡಲಾಗಿದೆ.

ಈ ಪ್ರಕರಣದಲ್ಲಿರುವ ಆರೋಪಿ ಬಾಲಕನು ಮಂಗಳೂರು ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇದೇ ಅಂಗಡಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಫಾರಿಶ್ ಎಂಬಾತನು, ಬಾಲಕನೊಂದಿಗೆ ತನಗೆ ಚಿನ್ನದ ಗಟ್ಟಿಯನ್ನು ಕೊಂಡುಹೋಗುವ ಮಾಹಿತಿ ನೀಡುವಂತೆ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಸೆ.26 ರಂದು ರಾತ್ರಿ 8.30 ರ ಹೊತ್ತಿಗೆ ಚಿನ್ನದ ಗಟ್ಟಿಯನ್ನು ಒಯ್ಯುತ್ತಿದ್ದ ಮುಸ್ತಫ ಅವರ ಚಲನವಲನದ ಮಾಹಿತಿಯನ್ನು ಆರೋಪಿ ಫಾರಿಶ್ ನಿಗೆ ನೀಡಿದ್ದಾನೆ. ಆರೋಪಿ ಸಫ್ವಾನ್ ಕಾರನ್ನು ಒದಗಿಸಿದ್ದಾನೆ.


ಪೂರ್ವಯೋಜಿತ ಸಂಚಿನಂತೆ ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ರವರು ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಇದೇ ಸಮಯ ಉಳಿದ ಆರೋಪಿಗಳು ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರಲ್ಲಿ ಬಂದು ಮುಸ್ತಾಫರವರನ್ನು ಬಲತ್ಕಾರವಾಗಿ ಕಾರಿನಲ್ಲಿ ಹಾಕಿ ಅಪಹರಿಸಿಕೊಂಡು ಹೋಗಿ ಹಲ್ಲೆ ಮಾಡಿ ಮಂಗಳೂರು ಎಕ್ಕೂರು ಎಂಬಲ್ಲಿ ಅವರನ್ನು ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ.

ಈ ಪ್ರಕರಣದಲ್ಲಿ ಕೃತ್ಯಕ್ಕೆ ಉಪಯೋಗಿಸಿದ KA-19HT-8545 ನೋಂದಣಿಯ ಸುಜುಕಿ ಆಕ್ಸೆಸ್ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ ಕಾರು ಮತ್ತು ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲು ಬಾಕಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಮಂಗಳೂರು ನಗರ ಮತ್ತು ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ರವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿ ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular