ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಮಳೆಯ ಆರಂಭದಲ್ಲೇ ವರುಣನ ಆರ್ಭಟ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜೂನ್ 13ರವರೆಗೆ ಹಲವೆಡೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಹಾಗೂ ಬೈಲಹೊಂಗಲ ತಾಲೂಕುಗಳಲ್ಲಿ ಧಾರಾಕಾರ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿವೆ. ಮೊಣಕಾಲು ಮಟ್ಟದ ನೀರು ಹರಿದ ಪರಿಣಾಮ ವಾಹನ ಸವಾರರು ಸಂಕಷ್ಟ ಅನುಭವಿಸಿದ್ದು, ಕೆಲ ಬೈಕ್‌ಗಳು ನೀರಿನ ರಭಸಕ್ಕೆ ತೇಲಿದ ಘಟನೆಗಳು ವರದಿಯಾಗಿವೆ.
ಬೈಲಹೊಂಗಲ ಪಟ್ಟಣದ ಮಾರ್ಕೆಟ್ ಪ್ರದೇಶ ಹಾಗೂ ಕಾಲೋನಿಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತೀ ಮಳೆಯ ಸಂದರ್ಭದಲ್ಲೂ ಇದೇ ಸಮಸ್ಯೆ ಎದುರಾಗುತ್ತಿದೆ ಎಂದು ಆರೋಪಿಸಿ ಈಶ್ವರ ಶಿಲ್ಲೇದಾರ್ ಎಂಬ ಯುವಕ ಹರಿಯುತ್ತಿದ್ದ ನೀರಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾನೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಮಳೆ ನೀರಿನೊಂದಿಗೆ ಚರಂಡಿ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಕುಟುಂಬಗಳು ರಾತ್ರಿಯಿಡೀ ಪರದಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಯಲ್ಲೂ ಕೊಳಚೆ ನೀರು ನುಗ್ಗಿದ್ದು, ಭಕ್ತರು ಪೂಜೆ ಸಲ್ಲಿಸಲು ತೊಂದರೆ ಅನುಭವಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕು ಪಡೆದಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆಸಿದ ಸಚಿವ ಯು.ಟಿ. ಖಾದರ್, ರಸ್ತೆ ಹೊಂಡಗಳಿಂದ ಅಪಘಾತ ಸಂಭವಿಸಿದರೆ ಸಂಬಂಧಿತ ಇಂಜಿನಿಯರ್‌ಗಳೇ ಹೊಣೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಮಲೆನಾಡು ಭಾಗಗಳಲ್ಲೂ ಜೂನ್ 10 ಮತ್ತು 11ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಮುಂಗಾರು ಮಳೆಯ ನಡುವೆ ಮುಂಜಾಗ್ರತಾ ಕ್ರಮಗಳ ಕೊರತೆಯಿಂದ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.



