ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ವ್ಯಾಪಕ ಅವಾಂತರ ಸೃಷ್ಟಿಸಿದ್ದು, ಮುಂದಿನ 4 ದಿನ ಭಾರಿ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆ ತೀವ್ರತೆ ಹೆಚ್ಚಾಗಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ವಿಪರೀತ ಮಳೆ ಆಗಲಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇವತ್ತು ಹಾಗೂ ನಾಳೆ ಆಗಸ್ಟ್ 29ಕ್ಕೆ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ಇನ್ನು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಕಲಬುರ್ಗಿ, ಬೀದರ್ ನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಾಲಾ ಕಾಲೇಜಿಗೆ ರಜೆ: ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗಿರಿ, ಉತ್ತರ ಕನ್ನಡ, ಗದಗ ಬೆಂಗಳೂರು ಸೇರಿ ಹಲವೆಡೆ ಆಗಸ್ಟ್ 30ಕ್ಕೆ ಭಾರೀ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ಜಿಲ್ಲಾಡಳಿತ ರಜೆ ನೀಡಿದೆ. ಇನ್ನು,
ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಘೋಷಿಸಿದ್ದಾರೆ.
ಆಗಸ್ಟ್ 30 ರಂದು ಮಳೆ: ಇನ್ನು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ. ಇತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಗಸ್ಟ್ 30ರಂದು ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಆಗಸ್ಟ್ 31ಕ್ಕೂ ಮಳೆ: ಇನ್ನು, ಆಗಸ್ಟ್ 31ಕ್ಕೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ವರುಣನ ಅಬ್ಬರ : ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಬ್ಬರಿಸಿದ್ದಾನೆ. ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣದ ಜೊತೆಗೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.