ಬೆಂಗಳೂರು : ರಾಜ್ಯದಲ್ಲಿ ಮುಂಗಾರು ವೈಪರೀತ್ಯದ ಪರಿಣಾಮ ಒಂದೆಡೆ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿದ್ದರೆ, ಮತ್ತೊಂದೆಡೆ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 13ರಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶೇ.40ರಿಂದ 43ರಷ್ಟು ಮಳೆ ಕೊರತೆಯಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ನೆಲವನ್ನೇ ನಂಬಿರುವ ಅನ್ನದಾತರ ಸಂಕಷ್ಟವನ್ನು ಅರಿಯುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ವತಿಯಿಂದ ವಿಶೇಷ ಅಧ್ಯಯನ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಜುಲೈ 13ರಿಂದ 15ರವರೆಗೆ ನಿಖಿಲ್ ಕುಮಾರಸ್ವಾಮಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಜುಲೈ 14ರಂದು ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸಲಿದ್ದು, ಬಳಿಕ ಸುದ್ದಿಗೋಷ್ಠಿಯನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.
ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಭಾಗದಲ್ಲಿ ರೈತರನ್ನು ಭೇಟಿ ಮಾಡಿ, ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ.



