ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವ ಘಟನೆ ರಾಜ್ಯದಾದ್ಯಂತ ತೀವ್ರ ಆಕ್ರೋಶ ಉಂಟುಮಾಡಿದೆ. ಈ ಭಯಾನಕ ಕೃತ್ಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, “ಇದು ಎಳೆಯ ಮಕ್ಕಳ ಮಾರಣಹೋಮಕ್ಕೆ ಎಡೆಯಾಗಬಹುದಾಗಿತ್ತು. ಶಾಲೆಯ ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆಯೆಂದು ಸಂತೋಷವಾಗಿದೆ. ಅವರನ್ನು ಅಭಿನಂದಿಸುತ್ತೇನೆ,” ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಈ ಪ್ರಕರಣದ ತನಿಖೆಗೆ ಪೊಲೀಸ್ ಇಲಾಖೆಗೆ ಸೂಕ್ತ ಸೂಚನೆ ನೀಡಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
“ಇಂತಹ ದುಷ್ಟ ಮನೋಭಾವ ನಮ್ಮ ಸಮಾಜದ ಮಾನವೀಯತೆಯ ಹೀನಮಟ್ಟವನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.