ಚಾಮರಾಜನಗರ: ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಪೊಲೀಸ್ ತಂಡಗಳಿಂದ ನಡೆದ ಪಥಸಂಚಲನ ಆಕರ್ಷಕವಾಗಿ ಮೂಡಿಬಂದಿತು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ದಂಡಾಧಿಕಾರಿ ಲಚ್ಚಪ್ಪ ಚೌಹಾಣ್ ಅವರ ನೇತೃತ್ವದಲ್ಲಿ ಜಿಲ್ಲಾ ಶಸಸ್ತ್ರ ಪೊಲೀಸ್ ಪಡೆ, ಸಿವಿಲ್, ಸಂಚಾರಿ, ಮಹಿಳಾ ತಂಡ, ಕೊಳ್ಳೇಗಾಲ ಉಪ ವಿಭಾಗ ತಂಡಗಳು ಭಾಗವಹಿಸಿದ್ದಪಥಸಂಚಲನ ಕಾರ್ಯವು ಅತ್ಯಂತ ಶಿಸ್ತುಬದ್ಧವಾಗಿ ನಡೆಯಿತು. ಪಥಸಂಚಲನದ ಬಳಿಕ ರಾಷ್ಟ್ರಧ್ವಜ ಹಾಗೂ ಪೊಲೀಸ್ ಧ್ವಜಗಳ ಆಗಮನವಾಯಿತು. ಇದೇ ವೇಳೆ ನುಡಿಸಿದ ರಾಷ್ಟ್ರಗೀತೆಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರೂ ಎದ್ದುನಿಂತು ಗೌರವ ಸಲ್ಲಿಸಿದರು. ನಂತರ ವಿವಿಧ ಮುಖಬೆಲೆಯ ಪೊಲೀಸ್ ಧ್ವಜಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಕೌಟುಂಬಿಕ ಒತ್ತಡವನ್ನು ಬದಿಗಿಟ್ಟು, ಪ್ರಾಣದ ಹಂಗು ತೊರೆದು ದಿನದ ೨೪ ಗಂಟೆಯು ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲದೆ, ಸಾರ್ವಜನಿಕರ ರಕ್ಷಣೆಗೆ ಮುಂದಾಗಿರುವ ಪೊಲೀಸರ ಸೇವೆಯನ್ನು ಸ್ಮರಿಸುವ ಸಲುವಾಗಿ ಧ್ವಜ ದಿನಾಚರಣೆಯನ್ನು ೧೯೯೬ರಿಂದ ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದರು. ಪೊಲೀಸ್ ಧ್ವಜ ದಿನದ ಅಂಗವಾಗಿ ೧೦, ೨೦, ೫೦, ೧೦೦ ರೂ. ಮುಖಬೆಲೆಯ ಪೊಲೀಸ್ ಧ್ವಜಗಳನ್ನು ಅಧಿಕಾರಿಗಳು, ನಾಗರಿಕರು ಸೇರಿದಂತೆ ಎಲ್ಲರಿಗೂ ಮಾರಾಟ ಮಾಡಿ ಹಣವನ್ನು ಸಂಗ್ರಹಿಸಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುವ ಅಧಿಕಾರಿ, ನೌಕರರ ಆರೋಗ್ಯ ಕಲ್ಯಾಣ ಕಾರ್ಯಗಳಿಗಾಗಿ ವಿನಿಯೋಗಿಸಲಾಗುತ್ತದೆ. ಇದೊಂದು ಉತ್ತಮ ಕಾರ್ಯವಾಗಿದೆ. ಕಳೆದ ಸಾಲಿನಲ್ಲಿ ನಿವೃತ್ತ ಪೊಲೀಸರ ಆರೋಗ್ಯ ಉದ್ದೇಶಗಳಿಗಾಗಿ ೫ ಲಕ್ಷದ ೧೪ ಸಾವಿರಕ್ಕೂ ಹೆಚ್ಚಿನ ವೆಚ್ಚ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಸಿ. ತಿಮ್ಮರಾಜು ಅವರು ಮಲೆ ಮಹದೇಶ್ವರ ನಡೆದಾಡಿದ ಪುಣ್ಯಭೂಮಿ ಚೆಲುವ ಚಾಮರಾಜನಗರ ಜಿಲ್ಲೆಯಲ್ಲಿ ೩೫ ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಸಂತೃಪ್ತಿ ಭಾವ ಮನೆಮಾಡಿದೆ. ಸೇವೆಯನ್ನು ಪರಿಗಣಿಸಿ ೨೦೧೫-೧೬ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಸರ್ಕಾರ ನೀಡಿದೆ ಎಂದರು. ಪೊಲೀಸರು ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಪೊಲೀಸರಿಗೆ ಅಗತ್ಯವಾಗಿದೆ. ಮನುಷ್ಯರಾದವರು ಏನಾದರೂ ಸಾಧನೆ ಮಾಡಬೇಕು. ಕರ್ನಾಟಕದಲ್ಲಿ ಚಾಮರಾಜನಗರ ಪೊಲೀಸರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ತಿಮ್ಮರಾಜು ಅವರು ತಿಳಿಸಿದರು.
ಇದೇ ವೇಳೆ ಕಳೆದ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್ ಅಧಿಕಾರಿ, ನೌಕರರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್.ಪಿ ಶಂಕರೇಗೌಡ, ಇತರರು ಕಾರ್ಯಕ್ರಮದಲ್ಲಿ ಇದ್ದರು.
