Monday, February 2, 2026
Google search engine

Homeರಾಜ್ಯರಂಜಾನ್ ಹಿನ್ನೆಲೆ ಮಾರ್ಚ್ 20ರವರೆಗೆ ಉರ್ದು ಶಾಲೆಗಳಿಗೆ ಬೆಳಿಗ್ಗೆ 8–12.45 ತರಗತಿ

ರಂಜಾನ್ ಹಿನ್ನೆಲೆ ಮಾರ್ಚ್ 20ರವರೆಗೆ ಉರ್ದು ಶಾಲೆಗಳಿಗೆ ಬೆಳಿಗ್ಗೆ 8–12.45 ತರಗತಿ

ಬೆಂಗಳುರು : ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ. ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿದೆ.

ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು. 2025-26ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಭಾರತೀಯ ಜನತಾ ಪಕ್ಷವು ಈ ಕ್ರಮವನ್ನು ತೀವ್ರವಾಗಿ ಆಕ್ಷೇಪಿಸಿದ್ದು, ಕಾಂಗ್ರೆಸ್ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ. ಯಾವುದೇ ಹಿಂದೂ ಹಬ್ಬಕ್ಕೂ ಅದು ಅದೇ ಕ್ರಮವನ್ನು ತೆಗೆದುಕೊಳ್ಳುತ್ತದೆಯೇ ಎಂದೂ ಬಿಜೆಪಿ ಪ್ರಶ್ನಿಸಿದೆ. ಇನ್ನು ಇದಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯಲ್ಲ. ಸಂವಿಧಾನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಮತ್ತು ಹಿಂದುಳಿದ ವರ್ಗಗಳನ್ನು ಪರಿಗಣಿಸಿರುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡಲು. ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇಂತಹ ಪ್ರೋತ್ಸಾಹ ಅಗತ್ಯ,” ಎಂದು ಅವರು ಹೇಳಿದ್ದಾರೆ. ಉರ್ದು ಮಾಧ್ಯಮದ ಮಕ್ಕಳು ಇತರರೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಸಣ್ಣ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸಹಿಸದಿದ್ದರೆ, ನೀವು ಸಮಾನತೆಯ ವಿರೋಧಿಗಳು ಎಂದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular