ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ ಆರ್ಸಿಬಿಯ 11 ಅಭಿಮಾನಿಗಳು ಸಾವಿಗೀಡಾದ ಘಟನೆ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ.
ಇತ್ತ, ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ನಂತರ ಮಧ್ಯಂತರ ಅರ್ಜಿ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ನ್ಯಾಯಮೂರ್ತಿಗಳು ವಿ. ಕಾಮೇಶ್ವರ ರಾವ್ ಮತ್ತು ಸಿ.ಎಂ. ಜೋಶಿ ಅವರ ಪೀಠವು ವಿಚಾರಣೆಯನ್ನು ಜೂನ್ 12 ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ಜೂನ್ 5 ರಂದು ನಡೆದ ಮೊತ್ತ ಮೊದಲ ವಿಚಾರಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ವರದಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ಆದರೆ ಈವರೆಗೂ ಯಾವುದೇ ವರದಿ ಸಲ್ಲಿಸದ ಹಿನ್ನೆಲೆ, ಹೈಕೋರ್ಟ್ ಗಂಭೀರ ಪ್ರಶ್ನೆ ಎಸೆದಿದೆ. ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ನ್ಯಾಯಾಂಗ ತನಿಖೆಗೆ ಈಗಾಗಲೇ ಆದೇಶ ನೀಡಲಾಗಿದೆ ಎಂದು ತಿಳಿಸಿ, ಒಂದು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಹೈಕೋರ್ಟ್ ಈ ಕುರಿತಂತೆ ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಿದೆ.