ಗದಗ : ಬಿಡದಿ ಟೌನ್‌ಶಿಪ್ ಹಾಗೂ ಕನಕಪುರದಲ್ಲಿ ಪ್ರಸ್ತಾಪವಾಗಿರುವ ಎರಡನೇ ವಿಮಾನ ನಿಲ್ದಾಣ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಶುಕ್ರವಾರ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಬಿಡದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂಬ ಸರ್ಕಾರದ ಹೇಳಿಕೆ ಕೇವಲ ನಾಟಕ ಎಂದು ಆರೋಪಿಸಿದರು. ರೈತರು ತಮ್ಮ ಮೇಲೆ ಒತ್ತಡ ಮತ್ತು ಬೆದರಿಕೆ ಇದೆ ಎಂದು ಆರೋಪಿಸುತ್ತಿದ್ದಾರೆ. ಸರ್ಕಾರ ರೈತರ ಹಿತವನ್ನು ಕಡೆಗಣಿಸುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಹಾಗೂ ಅವರ ಆಪ್ತರ ಬಳಿ ಸಾವಿರಾರು ಎಕರೆ ಜಮೀನು ಇದೆ ಎಂಬ ಆರೋಪ ಮಾಡಿರುವ ವಿಜಯೇಂದ್ರ, ಟೌನ್‌ಶಿಪ್ ಯೋಜನೆಗೆ ರೈತರ ಜಮೀನನ್ನೇ ಏಕೆ ಆಯ್ಕೆ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು. ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಸರ್ಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವನ್ನು ಕನಕಪುರಕ್ಕೆ ಸ್ಥಳಾಂತರಿಸುವ ನಿರ್ಧಾರವನ್ನೂ ವಿಜಯೇಂದ್ರ ಟೀಕಿಸಿದರು. ಈ ಯೋಜನೆಯ ಹಿಂದೆ ರಿಯಲ್ ಎಸ್ಟೇಟ್ ಉದ್ದೇಶವಿದೆ ಎಂದು ಆರೋಪಿಸಿದ ಅವರು, ತುಮಕೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಮಧ್ಯ ಹಾಗೂ ಉತ್ತರ ಕರ್ನಾಟಕದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಹಾಗೂ ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಕೃಷಿ ಸಚಿವರಿಲ್ಲದಿರುವುದು ದುರದೃಷ್ಟಕರ. ಬರ ಪರಿಸ್ಥಿತಿ ಕುರಿತು ಕೇವಲ ಪ್ರಧಾನಿಗೆ ಪತ್ರ ಬರೆಯುವುದರಿಂದ ಪ್ರಯೋಜನವಿಲ್ಲ. ಸಚಿವರನ್ನು ಜಿಲ್ಲೆಗಳಿಗೆ ಕಳುಹಿಸಿ ವಾಸ್ತವ ಸ್ಥಿತಿ ಪರಿಶೀಲಿಸಿ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
ಸರ್ಕಾರದ ಜನವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.



