Monday, November 10, 2025
Google search engine

Homeರಾಜಕೀಯ‘ರಾಜಾತಿಥ್ಯ’ ವಿವಾದ: ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

‘ರಾಜಾತಿಥ್ಯ’ ವಿವಾದ: ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರವು ಕಣ್ಮುಚ್ಚಿ ಕುಳಿತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಲ್ಲಿ ಮಾಡಲಾಗಿದೆ. ಪತ್ರಿಕೆಗಳಲ್ಲಿ- ದೃಶ್ಯ ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ನಿನ್ನೆ ದಾಳಿ ಮಾಡಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದೇ ರೀತಿ ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ. ಕಾಂಗ್ರೆಸ್ ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ, ಈ ರೀತಿ ಜೈಲಿನಲ್ಲಿ ವ್ಯವಸ್ಥೆ ಆಗಲು ಸಾಧ್ಯವಿಲ್ಲ ಎಂದು ಆರೋಪಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ?. ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಭಯೋತ್ಪಾದಕರಿಗೆ ಜೈಲಿನಲ್ಲೇ ಎಲ್ಲ ಅವಶ್ಯ ಸೌಲಭ್ಯ ನೀಡುವ ತೀರ್ಮಾನಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರ ಬಂದ ಹಾಗಿದೆ ಎಂದು ದೂರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕರಾದ ಕೆ. ಗೋಪಾಲಯ್ಯ, ಉದಯ್ ಬಿ. ಗರುಡಾಚಾರ್, ಎಂ. ಕೃಷ್ಣಪ್ಪ, ಸಿ. ಮುನಿರಾಜು ಸೇರಿ ಪ್ರಮುಖರು ಉಪಸ್ಥಿತರಿದ್ದರು.

ರಾಜಾತಿಥ್ಯ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರನ್ನ ಪೊಲೀಸರು ರೇಸ್ ಕೋರ್ಸ್ ರಸ್ತೆ ಬಳಿಯೇ ತಡೆದಿದ್ದಾರೆ. ಈ ವೇಳೆ ಬ್ಯಾರಿಕೇಡ್ ಏರಿದ ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular