ಮೈಸೂರು : ಕೊಲೆ ಯತ್ನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಗಂಗರಾಜು ವಿರುದ್ಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿಯೊಬ್ಬರು ಕುಳಿತಿರುವಾಗಲೇ ವಾಹನವನ್ನು ಚಲಾಯಿಸಿ, ಆ ವ್ಯಕ್ತಿಯ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪದಡಿ ದೂರು ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮೇ 21ರಂದು ಗಂಗರಾಜು ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಬಳಿಕ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಇಂದು ಗಂಗರಾಜುಗೆ ಜಾಮೀನು ಮಂಜೂರು ಮಾಡಿದೆ.
ಜಾಮೀನು ನೀಡುವ ವೇಳೆ ನ್ಯಾಯಾಲಯವು ಒಂದು ಲಕ್ಷ ರೂಪಾಯಿ ಮೊತ್ತದ ಶೂರಿಟಿ ಸಲ್ಲಿಸುವಂತೆ ಷರತ್ತು ವಿಧಿಸಿದೆ. ಅಗತ್ಯ ಶೂರಿಟಿ ಮತ್ತು ಇತರೆ ನ್ಯಾಯಾಲಯದ ಷರತ್ತುಗಳನ್ನು ಪೂರೈಸಿದ ಬಳಿಕ ಗಂಗರಾಜು ಬಿಡುಗಡೆ.
ಆರೋಪಿ ಗಂಗರಾಜು ಪರವಾಗಿ ಹಿರಿಯ ವಕೀಲ ಎಸ್. ಲೊಕೇಶ್ ಅವರು ವಕಾಲತ್ತು ವಹಿಸಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಪ್ರಕರಣದ ಮುಂದಿನ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿಯಲಿದೆ.



