ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ (ಮೇ ೩೧) ಪ್ರಜ್ವಲ್ ರೇವಣ್ಣ ಬಂಧಿತನಾಗಿದ್ದ. ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಸೋಮವಾರಕ್ಕೆ ಅಂತ್ಯವಾಗಿದೆ. ಹೀಗಾಗಿ ಎಸ್‌ಐಟಿ ಪೊಲೀಸರು ಇಂದು ಸೋಮವಾರ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಿದರು.
ಈ ಸಂದರ್ಭದಲ್ಲಿ ಎಸ್‌ಐಟಿ ಪೊಲೀಸರು, ಪ್ರಜ್ವಲ್ ರೇವಣ್ಣ ವಿಚಾರಣೆ ಮುಗಿದಿದ್ದು, ಸದ್ಯಕ್ಕೆ ತಮ್ಮ ಕಸ್ಟಡಿಗೆ ಅವಶ್ಯಕತೆ ಇರುವುದಿಲ್ಲ ಎಂದು ೪೨ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಪ್ರಜ್ವಲ್ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಜೂ.೨೪ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು. ಈ ಮೂಲಕ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೇರಲಿದ್ದಾರೆ.