ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‍ಐಟಿ ತನಿಖೆ ನಡೆಸಲಿದೆ ವಿನಃ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಸುತ್ತಮುತ್ತ ಹಲವು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ಸಂಬಂಧ ಸಮಗ್ರ ತನಿಖೆಗಾಗಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ ಎಂದರು.
ರಾಜ್ಯ ಸರಕಾರ ಯಾರ ಒತ್ತಡಕ್ಕೂ ಮಣಿದಿಲ್ಲ. ಈ ಹಿಂದೆಯೂ ನಾವು ಉನ್ನತ ಮಟ್ಟದ ತನಿಖೆ ಮಾಡುತ್ತೇವೆ ಎಂದು ಹೇಳಿದ್ದೇವು.ಅದರಂತೆ ಎಸ್‍ಐಟಿ ರಚನೆ ಮಾಡಲಾಗಿದೆ. ಆದರೆ, ಈ ತನಿಖಾ ತಂಡಕ್ಕೆ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಲು ಸೂಚಿಸಿಲ್ಲ ಎಂದು ಹೇಳಿದರು.