ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯರು, ವೈದ್ಯಕೀಯ ಬೆಂಬಲದೊಂದಿಗೆ ಎಸ್ ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುನಿಲ್ ನೇತೃತ್ವದ ತೀವ್ರ ನಿಗಾ ಘಟಕದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಎಸ್ ಎಂ ಕೃಷ್ಣ ಅವರಿಗೆ ಈಗ ೯೨ ವರ್ಷ ವಯಸ್ಸಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಜತೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಏಪ್ರಿಲ್ ೨೮ ರಂದು ಅಸ್ವಸ್ಥರಾದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸತತ ೧೫ ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಅವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಎಸ್.ಎಂ.ಕೃಷ್ಣ ಅವರ ಆರೈಕೆಯಲ್ಲಿ ತೊಡಗಿದ್ದಾರೆ.