ತುಮಕೂರು : ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಬೃಹತ್ ಸಮಾವೇಶದೊಂದಿಗೆ ತುಮಕೂರು ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಲಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳಡಿ ಒಟ್ಟು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ, ಆದೇಶ ಪತ್ರ ಹಾಗೂ ಇತರ ದಾಖಲೆಗಳನ್ನು ವಿತರಿಸಲಾಗುತ್ತಿದ್ದು, ಇದೇ ವಿಶೇಷ ಸಾಧನೆಗೆ ಕಾರಣವಾಗಿದೆ.
ಇ-ಪೌತಿ ಆಂದೋಲನದಡಿ 1,06,000 ಮಂದಿ, ದರಖಾಸ್ತು ಪೋಡಿ ಯೋಜನೆಯಡಿ 24,256 ಮಂದಿ, ಕಂದಾಯ ಗ್ರಾಮ ಯೋಜನೆಯಡಿ 20,666 ಮಂದಿ ಹಾಗೂ ಪೋಡಿ ಮುಕ್ತ ಅಭಿಯಾನದಡಿ 1,570 ಫಲಾನುಭವಿಗಳು ದಾಖಲೆಗಳನ್ನು ಪಡೆಯಲಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಗ್ಲೆಂಡ್‌ನ ಗಿನ್ನೆಸ್ ವಿಶ್ವ ದಾಖಲೆ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಅಧಿಕೃತ ದಾಖಲೆ ಪ್ರಮಾಣಪತ್ರ ವಿತರಿಸಲಾಗುವುದು ಎಂದರು.
ಇದೇ ವೇಳೆ 600 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೇಮಕಾತಿ ಪತ್ರಗಳನ್ನು ಹಂಚಲಾಗುತ್ತದೆ ಎಂದರಲ್ಲದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದೊಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಸಾಧನೆ ಮಾಡಿದ ಪಿಡಿಒಗಳು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್‌ಗಳು, ತಹಶೀಲ್ದಾರ್‌ಗಳು, ಸರ್ವೇಯರ್‌ಗಳು ಹಾಗೂ ಭೂ ದಾಖಲೆ ಇಲಾಖೆಯ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ಪ್ರದಾನಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 3,000 ಬಸ್‌ಗಳ ಮೂಲಕ ಫಲಾನುಭವಿಗಳನ್ನು ಕರೆತರಲಾಗುತ್ತಿದ್ದು, ಅವರಿಗೆ ಉಪಹಾರದ ವ್ಯವಸ್ಥೆಯೂ ಮಾಡಲಾಗಿದ್ದು, ಜಿಲ್ಲೆಯಾದ್ಯಂತ 1.52 ಲಕ್ಷಕ್ಕೂ ಅಧಿಕ ಫಲಾನುಭವಿಗಳಿದ್ದು, ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಸಂಸದರು, ಮಂಡಳಿ ಮತ್ತು ನಿಗಮಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭದ್ರತಾ ದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಅಗ್ನಿಶಾಮಕ ವಾಹನಗಳು, ವೈದ್ಯಕೀಯ ಸಿಬ್ಬಂದಿಯೊಂದಿಗೆ 15 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗಾಗಿ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಹೇಳಿದರು.



