ಬೆಂಗಳೂರು : ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಲೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಿಂದ ಬೆಳಗಾವಿಗೆ ಬಂದರೂ ಒಳಬೇಗುದಿ ತಣ್ಣಗಾಗುತ್ತಿಲ್ಲ! ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ವೇದಿಕೆಯಾಗಬೇಕಿದ್ದ ಬೆಳಗಾವಿ ಅಧಿವೇಶನ, ಕಾಂಗ್ರೆಸ್ ಪಕ್ಷದ ಕುರ್ಚಿ ಕಿತ್ತಾಟದಲ್ಲಿ ವ್ಯರ್ಥವಾಗುತ್ತಿರುವುದು ವಿಷಾದಕರ ಎಂದು ಹೇಳಿದ್ದಾರೆ.
ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಮ್ಮ ಬಾಲಿಶ ಹೇಳಿಕೆಗಳಿಂದ ಇಡೀ ಅಧಿವೇಶನದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಸದನಕ್ಕೆ ಗೈರು ಹಾಜರಾಗಿ ಹೈದರಾಬಾದ್‌ನಲ್ಲಿ ತೆಲಂಗಾಣ ಸರ್ಕಾರದ ಹೂಡಿಕೆ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತಮ್ಮ ಮುನಿಸು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟ ತಪ್ಪಿಗೆ ಕನ್ನಡಿಗರು ದಿನನಿತ್ಯ ಪಶ್ಚಾತಾಪ ಪಡುವುದಂತೂ ಅನಿವಾರ್ಯ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



