ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ರಾಜಕೀಯ ಚರ್ಚೆಗಳು ನಡೆದಿಲ್ಲ. ಗೊಂದಲಗಳನ್ನು ಮಾಧ್ಯಮಗಳೇ ಸೃಷ್ಟಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದರು.
ತಮಿಳುನಾಡಿಗೆ ತೆರಳುವ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ರಾಹುಲ್ ಗಾಂಧಿ ತಮಿಳುನಾಡಿಗೆ ಹೋಗುವ ವೇಳೆ ಅವರನ್ನು ಸ್ವಾಗತಿಸಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲದ ಬಗ್ಗೆ ನಾನು ಅಥವಾ ಡಿಸಿಎಂ ಮಾತನಾಡಬೇಕು. ಬೇರೆ ಯಾರೋ ಮಾತನಾಡಿದರೆ ಅದಕ್ಕೆ ಅರ್ಥವಿರುವುದಿಲ್ಲ. ನಮ್ಮ ಶಾಸಕರೂ ಈ ವಿಷಯದಲ್ಲಿ ಮಾತನಾಡುತ್ತಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ. ಇದು ಸಂಕ್ರಾಂತಿ ಕಾಂತ್ರಿಯಲ್ಲ, ಮಾಧ್ಯಮಗಳ ಚರ್ಚೆ ಮಾತ್ರ” ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಮಾತು ಕುರಿತ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಅದನ್ನು ಅವರು ಹೇಳಿಲ್ಲ, ನಾನು ಕೂಡ ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಗೊಂದಲವನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಖರ್ಗೆ ಅವರು ಹಾಗೆ ಹೇಳಿದ್ದಾರೆಯೇ? ನಾನು ಮತ್ತು ಡಿ.ಕೆ. ಶಿವಕುಮಾರ್ ಈಗಾಗಲೇ ಮಾತನಾಡಿದ್ದೇವೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆಗೆ ಸಿದ್ಧತೆ ನಡೆಯುತ್ತಿದೆ” ಎಂದರು.
ಕುಮಾರಸ್ವಾಮಿ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅವರಿಗೆ ಹಿಂದೆ ಆರೋಗ್ಯ ಸಮಸ್ಯೆ ಇತ್ತು. ಈಗ ಆರೋಗ್ಯವಾಗಿದ್ದಾರೆ. ಪ್ರೆಸ್ ಮೀಟ್ ಮಾಡಲಿ” ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು. ಬಿಜೆಪಿ–ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ತೊಂದರೆಯಿಲ್ಲ. ಕಾಂಗ್ರೆಸ್ ಪರವಾದ ಮತಗಳು ಕಾಂಗ್ರೆಸ್‌ಗೆ ಬರುತ್ತವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.



