ಗೌರಿಬಿದನೂರು : ತಾಲೂಕಿನ ಗ್ರಾಮೀಣ ಭಾಗದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಹಂತ ಹಂತವಾಗಿ ಹಕ್ಕುಪತ್ರ ಹಾಗೂ ಇ-ಸ್ವತ್ತು ಖಾತೆಗಳನ್ನು ವಿತರಿಸಲಾಗುವುದು ಎಂದು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ತಿಳಿಸಿದ್ದಾರೆ.
ಈ ಕುರಿತು ತೊಂಡೇಬಾವಿ ಹೋಬಳಿಯ ಇಂದಿರಾನಗರ ಗ್ರಾಮದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ನಡೆದ ಹಕ್ಕುಪತ್ರ ಮತ್ತು ಇ-ಸ್ವತ್ತು ಖಾತೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಕ್ಕುಪತ್ರದಿಂದ ಫಲಾನುಭವಿಗಳಿಗೆ ಆಸ್ತಿಯ ಮೇಲಿನ ಸಂಪೂರ್ಣ ಮಾಲೀಕತ್ವದ ಹಕ್ಕು ದೊರೆಯಲಿದೆ. ಇದರಿಂದ ಮನೆ ನಿರ್ಮಾಣ, ಬ್ಯಾಂಕ್ ಸಾಲ ಪಡೆಯುವುದು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ತಾಲೂಕಿನ ಎಲ್ಲ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಂತ ಹಂತವಾಗಿ ದಾಖಲೆಗಳನ್ನು ವಿತರಿಸಲಾಗುವುದು. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಪಾರದರ್ಶಕ ಹಾಗೂ ಜನಸ್ನೇಹಿ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಎಸಿಸಿ ಸಿಮೆಂಟ್ ಕಾರ್ಖಾನೆಯ ಸಿಎಸ್‌ಆರ್ ಅನುದಾನದ ಬಳಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಪುಟ್ಟಸ್ವಾಮಿಗೌಡ, ಕ್ಷೇತ್ರದ ಜನಪ್ರತಿನಿಧಿಗಳ ಗಮನಕ್ಕೆ ತಾರದೆ ಸಣ್ಣಪುಟ್ಟ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಕಾರ್ಖಾನೆಯಿಂದ ಉಂಟಾಗುತ್ತಿರುವ ಧೂಳಿನಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸುವುದಾಗಿ ತಿಳಿಸಿದರು. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹100 ಕೋಟಿ ಅನುದಾನದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಬಳಿಕ ತಹಶೀಲ್ದಾರ್ ಕೆ.ಎಂ.ಅರವಿಂದ್ ಮಾತನಾಡಿ, ಕಂದಾಯ ಇಲಾಖೆ ಜನಸ್ನೇಹಿ ಸೇವೆ ನೀಡಲು ಬದ್ಧವಾಗಿದ್ದು, ಶೀಘ್ರದಲ್ಲೇ ಬೃಹತ್ ಮಟ್ಟದಲ್ಲಿ ಇ-ಸ್ವತ್ತು ವಿತರಣಾ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಇಒ ಜಿ.ಕೆ.ಹೊನ್ನಯ್ಯ, ವೃತ್ತ ನಿರೀಕ್ಷಕ ವಿ.ಅಂಜನ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎನ್.ವೆಂಕಟರಾಮರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.



