ಬೆಂಗಳೂರು : ರಾಜ್ಯದ ದೇವಸ್ಥಾನಗಳ ಹುಂಡಿ ಹಣದ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪ, ಅಕ್ರಮ ಅಥವಾ ದುರ್ಬಳಕೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ, ಮುಜರಾಯಿ ಹಾಗೂ ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಹುಂಡಿ ಹಣ ಕಳವು ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೇವಸ್ಥಾನಗಳ ಹಣಕಾಸು ನಿರ್ವಹಣೆಯ ಮೇಲೆ ಹೆಚ್ಚಿನ ನಿಗಾ ವಹಿಸಿದೆ ಎಂದು ತಿಳಿಸಿದ ಅವರು, ದೇವಸ್ಥಾನಗಳಿಗೆ ಭಕ್ತರು ಸಮರ್ಪಿಸುವ ಹುಂಡಿ ಹಣದ ಎಣಿಕೆ, ದಾಖಲಾತಿ ಹಾಗೂ ಬಳಕೆ ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ಅಥವಾ ಅಕ್ರಮಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಇನ್ನೂ ಹುಂಡಿ ಹಣದ ನಿರ್ವಹಣೆಯಲ್ಲಿ ಲೋಪ ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಭಕ್ತರ ವಿಶ್ವಾಸ ಉಳಿಸಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಪರಮೇಶ್ವರ್ ಹೇಳಿದರು.
ಇಷ್ಟಲ್ಲದೆ, ದೇವಸ್ಥಾನಗಳ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಅಕ್ರಮದ ಆರೋಪಗಳು ಬಂದರೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಜೊತೆಗೆ ದೇವಸ್ಥಾನಗಳ ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.



