Thursday, March 5, 2026
Google search engine

Homeರಾಜಕೀಯಸತೀಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ನಾಯಕ ಸಮಾಜ ಮುತ್ತಿಗೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ

ಸತೀಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ನಾಯಕ ಸಮಾಜ ಮುತ್ತಿಗೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ

ಬೆಳಗಾವಿ : ರಾಜ್ಯ ರಾಜಕಾರಣದ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಬೆಳಗಾವಿ ನಿವಾಸದ ಮುಂದೆ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದ ನೂರಾರು ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಸಚಿವರ ಮನೆಯ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ‘ವಾಲ್ಮೀಕಿ ಸಮಾಜಕ್ಕೆ ನ್ಯಾಯ ಕೊಡಿಸಿ, ಇಲ್ಲವಾದರೆ ಸ್ಥಾನಕ್ಕೆ ರಾಜೀನಾಮೆ ನೀಡಿ’ ಎಂದು ಸಚಿವರಿಗೆ ನೇರ ಎಚ್ಚರಿಕೆ ನೀಡಿದರಲ್ಲದೆ, ಸಮಾಜಕ್ಕೆ ಪ್ರಸ್ತುತ ಸಿಕ್ಕಿರುವ ಶೇ.7 ರಷ್ಟು ಮೀಸಲಾತಿಗೆ ಯಾವುದೇ ತಳಬುಡವಿಲ್ಲದಂತಾಗಿದೆ. ಈ ಮೀಸಲಾತಿಗೆ ತಕ್ಷಣವೇ ಶಾಸನಬದ್ಧ ಮಾನ್ಯತೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಕೋಲಿ ಮತ್ತು ಕಬ್ಬಲಿಗ ಜನಾಂಗದವರು ವಾಲ್ಮೀಕಿ ಸಮಾಜದ ಹೆಸರಿನಲ್ಲಿ ಸುಳ್ಳು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಮುಂದುವರೆದು, ನಕಲಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿಯನ್ನು ಸಂವಿಧಾನದ ‘ಶೆಡ್ಯೂಲ್ 9’ಕ್ಕೆ ಸೇರಿಸುವ ಮೂಲಕ ಶಾಶ್ವತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಸಮಾಜದ ಶೈಕ್ಷಣಿಕ ಅಭಿವೃದ್ಧಿಗಾಗಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಗೆ 15,000 ಕೋಟಿ ರೂಪಾಯಿಗಳ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೆ, ಕರ್ನಾಟಕದಲ್ಲಿ ಪ್ರತ್ಯೇಕ ‘ಬುಡಕಟ್ಟು ವಿಶ್ವವಿದ್ಯಾಲಯ’ ಸ್ಥಾಪಿಸಿ ಸಂಶೋಧನೆಗೆ ಅವಕಾಶ ಕಲ್ಪಿಸಬೇಕು ಎಂಬುದು ಸಮಾಜದ ಪ್ರಮುಖ ಬೇಡಿಕೆಯಾಗಿದೆ. ಸಂಶೋಧನಾ ವಿದ್ಯಾರ್ಥಿಗಳ ಮಾಸಿಕ ವೇತನ ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರೋತ್ಸಾಹಧನ ವಿಳಂಬವಾಗುತ್ತಿರುವುದಕ್ಕೂ ಸಮಾಜ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಪ್ರತಿಭಟನೆಯ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸಮಾಜದ ನಾಯಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ಕೂಡಲೇ ಎಚ್ಚೆತ್ತು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

RELATED ARTICLES
- Advertisment -
Google search engine

Most Popular