ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಮನಗರದಲ್ಲಿ ಈ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಪ್ರಭಾವ ಬಳಸಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಕಳ್ಳ ಮತದಾರರನ್ನಾಗಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ವಿಡಿಯೋ ಬಿಡುಗಡೆ ಮಾಡಿ ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮಗಳ ಪ್ರಕಾರ ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಾದರೆ, ರಾಮನಗರದಲ್ಲಿ ಸಾವಿರಾರು ಜನರನ್ನು ಕಲ್ಯಾಣ ಮಂಟಪ ಹಾಗೂ ಚೌಲ್ಟ್ರಿಗಳಲ್ಲಿ ಒಟ್ಟುಗೂಡಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನೂ ಈ ಮೂಲಕ ಕಾನೂನುಬಾಹಿರವಾಗಿ ಕಳ್ಳ ಮತದಾರರನ್ನು ಸೃಷ್ಟಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಕುಮಾರಸ್ವಾಮಿ ದೂರಿದರು. ಈ ಪ್ರಕ್ರಿಯೆಯಲ್ಲಿ ಸ್ಥಳೀಯರಷ್ಟೇ ಅಲ್ಲದೆ, ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವ ವಲಸಿಗರಿಗೂ ದಾಖಲೆ ಸೃಷ್ಟಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಈ ಬೆಳವಣಿಗೆ ದೇಶದ ಭದ್ರತೆ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದು ಹೇಳಿದರು.
ಈ ಗಂಭೀರ ಆರೋಪಗಳ ಕುರಿತು ಕೇಂದ್ರ ಚುನಾವಣಾ ಆಯೋಗ ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಈ ಸಂಬಂಧ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರುವುದಾಗಿ ಹಾಗೂ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸುವುದಾಗಿ ಕುಮಾರಸ್ವಾಮಿ ತಿಳಿಸಿದರು.
ಗಮನಾರ್ಹವಾಗಿ, ಈ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರ ಅಥವಾ ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.



